ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪರಿಗಣಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 24, 2026 (ಶುಕ್ರವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಪಿಯುಸಿ ಮತ್ತು ಐಟಿಐ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ರಜೆ ಘೋಷಿಸಲಾದ ಶಿಕ್ಷಣ ಸಂಸ್ಥೆಗಳು:
ಎಲ್ಲಾ ಅಂಗನವಾಡಿ ಕೇಂದ್ರಗಳು
ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು
ಪಿಯುಸಿ (12ನೇ ತರಗತಿ) ಕಾಲೇಜುಗಳು
ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು
ಆದರೆ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಹಾಗೂ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ನದಿ, ಹೊಳೆ, ಕೆರೆ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ಮೀನುಗಾರರು ಹಾಗೂ ಕರಾವಳಿ ಭಾಗದ ನಿವಾಸಿಗಳು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ 0824-2442590 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

0 ಕಾಮೆಂಟ್‌ಗಳು