ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ತಲ್ವಾರ್‌ನಿಂದ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿಷ ಸೇವಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಸಂಜೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸಿ ರೋಡ್‌ನಲ್ಲಿ ಲಾವಣ್ಯ (21) ಎಂಬ ಯುವತಿಯನ್ನು ತಲ್ವಾರ್‌ನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರೈಂ ನಂ.95/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 78, 126 ಹಾಗೂ 103ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಮೃತ ಯುವತಿಯ ದೂರದ ಸಂಬಂಧಿಯಾಗಿರುವ ಚೇತನ್ ಎಂಬಾತನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಆರೋಪಿ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದು, ಇದೇ ವಿಚಾರವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನಿನ್ನೆ ಸಂಜೆ ತಲ್ವಾರ್‌ನೊಂದಿಗೆ ಬಂದು ಯುವತಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದ ಎನ್ನಲಾಗಿದೆ.
ಘಟನೆಯ ಬಳಿಕ ಆರೋಪಿಯ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಚೇತನನ್ನು ಮಂಗಳೂರಿನಲ್ಲಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಚಾರಣೆ ವೇಳೆ ಆರೋಪಿ ತಾನು ಇಲಿ ಪಾಷಾಣ (ವಿಷ) ಸೇವಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ತಕ್ಷಣವೇ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆರೋಪಿಯ ಬಂಧನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಮುಂದುವರಿದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾಹಿತಿ ನೀಡಿದ್ದಾರೆ.

0 ಕಾಮೆಂಟ್‌ಗಳು