HEADLINES

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ - ಕಾಲೇಜುಗಳಿಗೆ ರಜೆ

 ಮಂಗಳೂರು, ಜು.31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 1 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿಪೂರ್ವ (12ನೇ ತರಗತಿವರೆಗೆ), ಐಟಿಐ, ಡಿಪ್ಲೋಮ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ರಜೆ ಘೋಷಿಸಿದ್ದಾರೆ.


ಆದರೆ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ವೈದ್ಯಕೀಯ,  ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಭಾರೀ ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ನದಿ, ಕೆರೆ, ಸಮುದ್ರ ತೀರ ಹಾಗೂ ತಗ್ಗು ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಪ್ರವಾಸಿಗರು ಜಲಪಾತ ಹಾಗೂ ಅಪಾಯದ ಪ್ರದೇಶಗಳಿಗೆ ಭೇಟಿ ನೀಡದಂತೆ ಸೂಚಿಸಲಾಗಿದೆ.

ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು