HEADLINES

ಮಂಗಳೂರು ಕಾಲೇಜು ವಿದ್ಯಾರ್ಥಿಗಳಿಗೆ ದಿಢೀರ್ ಡ್ರಗ್ಸ್ ಟೆಸ್ಟ್; ಪರೀಕ್ಷೆಯಿಂದ ತಪ್ಪಿಸಲು ಯತ್ನಿಸಿದ ಓರ್ವ ವಿದ್ಯಾರ್ಥಿ

 ಮಂಗಳೂರು: ಡ್ರಗ್ಸ್ ಸೇವನೆ ವಿರುದ್ಧ ಜಾಗೃತಿ ಮೂಡಿಸುವ ಹಾಗೂ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳ ಮೇಲೆ ದಿಢೀರ್ ಡ್ರಗ್ಸ್ ಸ್ಕ್ರೀನಿಂಗ್ ಕಾರ್ಯಾಚರಣೆ ನಡೆಸಿದರು.


ನಗರದ ವಿವಿಧ ಭಾಗಗಳಲ್ಲಿ ಕಾಲೇಜು ಹಾಗೂ ಖಾಸಗಿ ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಡ್ರಗ್ಸ್ ಪರೀಕ್ಷೆ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ ಒಟ್ಟು 159 ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. 158 ವಿದ್ಯಾರ್ಥಿಗಳ ವರದಿಗಳು ನೆಗೆಟಿವ್ ಬಂದಿದ್ದು, ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವ ವಿದ್ಯಾರ್ಥಿಯ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ.


ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾತನಾಡಿ, ವಿದ್ಯಾರ್ಥಿಗಳನ್ನು ಮಾದಕ ವ್ಯಸನದಿಂದ ದೂರವಿಡುವುದು ಹಾಗೂ ಡ್ರಗ್ಸ್ ಮುಕ್ತ ಶೈಕ್ಷಣಿಕ ವಾತಾವರಣ ನಿರ್ಮಿಸುವ ಉದ್ದೇಶದಿಂದ ಇಂತಹ ಅಚ್ಚರಿ ತಪಾಸಣೆಗಳನ್ನು ಮುಂದಿನ ದಿನಗಳಲ್ಲೂ ನಿರಂತರವಾಗಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಡ್ರಗ್ಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.


ನಗರದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಿದ್ದು, ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು