HEADLINES

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಅಧಿಕೃತ ಒಪ್ಪಿಗೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಹೈಪವರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಕಂಬಳ ಆಯೋಜನೆಯಾದ ನಂತರ, ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ವೇದಿಕೆಯಲ್ಲೂ ಕಂಬಳ ನಡೆಯುವುದು ಅಧಿಕೃತವಾಗಿ ನಿಶ್ಚಿತವಾಗಿದೆ. ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆ ಈ ಬಾರಿಯ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಲಿದ್ದು, ಅಗತ್ಯ ಸಿದ್ಧತೆಗಳನ್ನು ತಕ್ಷಣ ಆರಂಭಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಹಲವರು ಭಾಗವಹಿಸಿ ಕಂಬಳ ಆಯೋಜನೆಗೆ ಬೆಂಬಲ ವ್ಯಕ್ತಪಡಿಸಿದರು.

ಈ ಐತಿಹಾಸಿಕ ನಿರ್ಧಾರಕ್ಕೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಸಾಂಪ್ರದಾಯಿಕವಾಗಿ ಪೇಟ ತೊಡಿಸಿ, ಕಂಬಳದ ಬೆತ್ತ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, "ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೇದಿಕೆಯಲ್ಲಿ ಕಂಬಳ ಆಯೋಜನೆಯಾಗುತ್ತಿರುವುದು ತುಳುನಾಡಿನ ಜನಪದ ಸಂಸ್ಕೃತಿಗೆ ಸಂದಿರುವ ಹೆಮ್ಮೆಯ ಗೌರವವಾಗಿದೆ. ಇದರಿಂದ ಕಂಬಳಕ್ಕೆ ಇನ್ನಷ್ಟು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ದೊರೆಯಲಿದ್ದು, ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ವಿಶ್ವದ ಗಮನಕ್ಕೆ ತರುವ ಮಹತ್ವದ ಹೆಜ್ಜೆಯಾಗಲಿದೆ," ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು