HEADLINES

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ

 ಬೆಂಗಳೂರು: ಕರ್ನಾಟಕದ ಮಾಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.


ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.


ಬಿ.ಸಿ. ನಾಗೇಶ್ ಅವರು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತಿಪಟೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.


ನಿಧನದ ಬಳಿಕ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ತಿಪಟೂರಿಗೆ ಕೊಂಡೊಯ್ಯಲಾಗಿದ್ದು, ಇಂದು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ತಿಪಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.


ಬಿ.ಸಿ. ನಾಗೇಶ್ ಅವರ ನಿಧನಕ್ಕೆ ರಾಜಕೀಯ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು