HEADLINES

ಪುತ್ತೂರು: ಡಿಜಿಟಲ್ ಸೇವಾ ಕೇಂದ್ರದಲ್ಲಿ ಗಲಾಟೆ; ಎರಡೂ ಕಡೆಯಿಂದ ದೂರು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ

ಪುತ್ತೂರು, ಆ.22: ನಗರದ ದರ್ಬೆ ಪ್ರದೇಶದಲ್ಲಿರುವ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ದಾಖಲೆ ಜೆರಾಕ್ಸ್ ಹಾಗೂ ಲ್ಯಾಮಿನೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಮತ್ತು ಕೇಂದ್ರದವರ ನಡುವೆ ಗಲಾಟೆ ನಡೆದ ಘಟನೆ ಶುಕ್ರವಾರ ನಡೆದಿದೆ.

ಮಂಡೆಕೋಲು ಭಾಗದ ಕೆಲವರು ಮಗುವಿನ ಜನನ ಪ್ರಮಾಣಪತ್ರ ಸೇರಿದಂತೆ ದಾಖಲೆಗಳ ಜೆರಾಕ್ಸ್ ಹಾಗೂ ಲ್ಯಾಮಿನೇಷನ್ ಮಾಡಿಸಲು ಸೇವಾ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಲ್ಯಾಮಿನೇಷನ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಸಮಸ್ಯೆಯಿಂದ ದಾಖಲೆ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ನಂತರ ಮಾತಿನ ಚಕಮಕಿ ಗಲಾಟೆಗೆ ತಿರುಗಿದ್ದು, ಎರಡೂ ಕಡೆಯವರ ನಡುವೆ ಹಲ್ಲೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಈ ಸಂದರ್ಭದಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕೆಲವರು ಅಡ್ಡಿಪಡಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣವೂ ದಾಖಲಾಗಿದೆ. ಗಲಾಟೆಗೆ ಸಂಬಂಧಿಸಿ ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿರುವ ಪೊಲೀಸರು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಗಲಾಟೆಗೆ ಕಾರಣ ಹಾಗೂ ಘಟನೆಯ ನೈಜ ಸ್ವರೂಪದ ಬಗ್ಗೆ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು